ತುರುವೇಕೆರೆ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಎದುರಿಸಲು ಜೆಡಿಎಸ್, ಬಿಜೆಪಿ ಮೈತ್ರಿ ಅನಿವಾರ್ಯ ಮತ್ತು ಅಗತ್ಯ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.
ಮಾಧ್ಯಮದೊಂದಿಗೆ ಮಾತನಾಡಿದ ಅವರು, 2024 ರ ಲೋಕಸಭಾ ಚುನಾವಣೆಯಲ್ಲೂ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರುವುದು ಹಾಗೂ ನರೇಂದ್ರ ಮೋದಿ ಸರ್ಕಾರ ಹ್ಯಾಟ್ರಿಕ್ ಜಯ ಗಳಿಸುವುದು ನಿಶ್ಚಿತವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿಯಾದರೆ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದಾಗಿದೆ ಎಂದರು.
ಬಿಜೆಪಿ ಜೆಡಿಎಸ್ ಮೈತ್ರಿಗೆ ನನ್ನ ಸಂಪೂರ್ಣ ಸಹಮತವಿದ್ದು, ಪಕ್ಷದ ವರಿಷ್ಠರು ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೂ ನನ್ನ ಒಪ್ಪಿಗೆಯಿದೆ. ರಾಜಕೀಯದಲ್ಲಿ ಅಪಾರ ಅನುಭವ ಹೊಂದಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಹಿತದೃಷ್ಟಿ, ಕಾರ್ಯಕರ್ತರ ಭಾವನೆಗಳಿಗೆ ಧಕ್ಕೆಯಾಗದಂತೆ ಒಳ್ಳೆಯ ನಿರ್ಧಾರವನ್ನೇ ತೆಗೆದುಕೊಳ್ಳುತ್ತಾರೆನ್ನುವ ವಿಶ್ವಾಸ ನಮಗಿದೆ ಎಂದ ಅವರು, ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿಯಲ್ಲಿ ಯಾವುದೇ ಪಕ್ಷದ ಅಭ್ಯರ್ಥಿ ಸ್ಪರ್ಧಿಸಿದರೂ ಮೈತ್ರಿ ಅಭ್ಯರ್ಥಿಗೇ ಗೆಲುವು ಶತಃಸಿದ್ಧ ಎಂದರು.
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲೇ ಮುಳುಗಿಹೋಗಿದ್ದು ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಒದಗಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ ಅವರು, ಅಭಿವೃದ್ದಿ ಕಡೆಗಣಿಸಿರುವ ಕಾಂಗ್ರೆಸ್ ಸರ್ಕಾರಕ್ಕೆ ಸರಿಯಾದ ಬುದ್ಧಿ ಕಲಿಸಲು ಬಿಜೆಪಿ, ಜೆಡಿಎಸ್ ಪಕ್ಷಗಳು ಒಂದಾಗುವುದು ಉತ್ತಮ ಬೆಳವಣಿಗೆಯಾಗಿದೆ. ಎರಡೂ ಪಕ್ಷಗಳ ಮೈತ್ರಿಯಿಂದ ಲೋಕಸಭಾ ಚುನಾವಣೆ ಮಾತ್ರವಲ್ಲದೆ ಮುಂಬರುವ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಗೆಲುವು ಸಾಧಿಸಲು ಸಹಕಾರಿಯಾಗಲಿದೆ ಎಂದರು.
*ವರದಿ: ಗಿರೀಶ್ ಕೆ ಭಟ್, ತುರುವೇಕೆರೆ*